ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿಟಿ ರವಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಪೊಲೀಸರು ಬಂಧಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು. ಇದು ಕೇವಲ ಮಾನವ ಹಕ್ಕುಗಳ ಉಲ್ಲಂಘನೆಯಷ್ಟೇ ಅಲ್ಲ, ಗಂಭೀರ ಮಹಿಳಾ ದೌರ್ಜನ್ಯ ಪ್ರಕರಣವಾಗಿದೆ ಎಂದು ಅವರು ಕಿಡಿಕಾರಿದರು.
ರಾಜಕೀಯ ಪ್ರಭಾವ ಬಳಸಿ ಈ ರೀತಿಯ ಕೃತ್ಯ ನಡೆಸಲಾಗಿದೆ. ಇದು ಮಾನವೀಯ ಜಗತ್ತು ತಲೆತಗ್ಗಿಸುವಂತಹ ಘಟನೆ ಎಂದು ಸಿಟಿ ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯ ಮಹಿಳಾ ಆಯೋಗವು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಇದೇ ವೇಳೆ, ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪೊಲೀಸರ ಈ ಕೃತ್ಯಕ್ಕೆ ಯಾವುದೇ ಪ್ರಾಯಶ್ಚಿತ್ತವಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೊರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಿಟಿ ರವಿ ಸರ್ಕಾರವನ್ನು ಒತ್ತಾಯಿಸಿದರು.

