ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿದ್ದಾರೆ. ಅಲ್ಮೋರಾದ ದ್ವಾರಹತ್‌ನಿಂದ ನೈನಿತಾಲ್ ಜಿಲ್ಲೆಯ ರಾಮನಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 19 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಚಾಲಕ ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಇದೇ ವೇಳೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ದೇವರನ್ನು ಪ್ರಾರ್ಥಿಸುತ್ತೇನೆ. ಈ ಘಟನೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಸ್ಥಳೀಯ ಆಡಳಿತಾಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ,” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತವು ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

