ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಇಂದು ನಡೆದಿದೆ.
ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಪುರದ ಹನುಮಂತಪ್ಪ (50) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರಿಗೆ ವೇಗವಾಗಿ ಬಂದ ಬೋಲೇರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ಬಳಿಕ ಪೊಲೀಸರು ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂಪಿ ಸಿಪಿಐ ರಾಜೇಶ್ ಬಟಕುರ್ಕಿ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

