ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಈಚನಾಳ ಹಾಗೂ ಈಚನಾಳ ತಾಂಡಾ ಗ್ರಾಮಗಳು ಸೇರಿದಂತೆ ಈಚನ ಗ್ರಾಮ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿರುವುದರಿಂದ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಮದ್ಯದ ದುಷ್ಪರಿಣಾಮದಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂದು ಮಹಿಳೆಯರು ಅಳಲು ತೋಡಿಕೊಂಡರು. ಗ್ರಾಮ ಪಂಚಾಯಿತಿ ಆವರಣದಲ್ಲಿಯೇ ಡಬ್ಬ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು. ಈ ವೇಳೆ ಕಣ್ಣೀರಿಟ್ಟ ಬಾಲಕಿ ದೃಶ್ಯವು ಎಲ್ಲರ ಮನ ಕಲಕುವಂತಿತ್ತು.
ಗ್ರಾಮದಲ್ಲಿ ಮದ್ಯದ ಅಮಲಿನಿಂದ ಗೃಹಹಿಂಸೆ, ಜಗಳ, ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆಯರು ಆಗ್ರಹಿಸಿದರು.
ಈ ಸಂಬಂಧ ಗ್ರಾಮಸ್ಥರು ಹಾಗೂ ಮಹಿಳೆಯರ ತಂಡ ಅಬಕಾರಿ ಮತ್ತು ಪೊಲೀಸ್ ಇಲಾಖೆಗೆ ಮನವಿ ಪತ್ರ ಸಲ್ಲಿಸಿ, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ಅಕ್ರಮ ಮದ್ಯ ಮಾರಾಟ ನಿಲ್ಲಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

