ಯಾದಗಿರಿ (ಏ.17): ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 7 ಮಂದಿ ಸಜೀವ ದಹನಗೊಂಡ ದುರ್ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ.
ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ವಿಆರ್‌ಎಲ್ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಹೊರಟಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬಸ್ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದವರು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಇದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಎರಡೂ ವಾಹನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿರುವುದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಎರಡೂ ವಾಹನಗಳು ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿವೆ.

