ನವದೆಹಲಿ, ಫೆಬ್ರವರಿ 24: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ್ ಮಂಡಪಂನಲ್ಲಿ ನಡೆದ ಶರ್ಟ್‌ಲೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾರು ಸುತ್ತಿನ ವಿಚಾರಣೆಯ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಶುಕ್ರವಾರ ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕಾಂಗ್ರೆಸ್‌ನ ಇತರೆ ಯುವ ನಾಯಕರೊಂದಿಗೆ ಚಿಬ್ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಚಿಬ್ ಅಧಿಕಾರಿಗಳಿಗೆ ಸಮರ್ಪಕವಾಗಿ ಸಹಕರಿಸಲಿಲ್ಲ ಹಾಗೂ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು ಎಂಬ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಸಾಕಷ್ಟು ಪುರಾವೆಗಳು ಸಂಗ್ರಹಗೊಂಡಿದ್ದು, ಅವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿತೇಂದ್ರ ಯಾದವ್, ರಾಜ್ ಗುಜ್ಜರ್ ಮತ್ತು ಅಜಯ್ ಕುಮಾರ್ ಅವರನ್ನು ಕೂಡ ಬಂಧಿಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶ ಐವೈಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಲಲಿತ್‌ಪುರದ ರಿತಿಕ್ ಅಲಿಯಾಸ್ ಮಾಂಟಿ ಶುಕ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರ ವಿರುದ್ಧ ಗುಂಪುಗಳ ನಡುವೆ ದ್ವೇಷ ಬಿತ್ತಿದ ಹಾಗೂ ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದ ಆರೋಪಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಇದಕ್ಕೂ ಮುನ್ನ ಇದೇ ಎಐ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯವು ಚೀನಾದ ರೋಬೋಟ್ ಅನ್ನು ಭಾರತೀಯ ಅನ್ವೇಷಣೆಯೆಂದು ಹೇಳಿಕೊಂಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್‌ನ ಅರೆಬೆತ್ತಲೆ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

